Hashtagintro

ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ: ಶಾಲಾ ಶಿಕ್ಷಣದ ಹೆಸರಿನಲ್ಲಿ ನಡೆಯುತ್ತಿರುವ ಖಾಸಗಿ ಟ್ಯೂಷನ್ ದಂಧೆಗೆ ಬ್ರೇಕ್

ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ: ಶಾಲಾ ಶಿಕ್ಷಣದ ಹೆಸರಿನಲ್ಲಿ ನಡೆಯುತ್ತಿರುವ ಖಾಸಗಿ ಟ್ಯೂಷನ್ ದಂಧೆಗೆ ಬ್ರೇಕ್

 ಬೆಂಗಳೂರು, (ನವೆಂಬರ್ 15):  ಕರ್ನಾಟಕದಲ್ಲಿ ಖಾಸಗಿ ಟ್ಯೂಷನ್ ಸೆಂಟರ್‌ಗಳ ಹಾವಳಿಗೆ ಬ್ರೇಕ್ ಹಾಕಲು ಶಿಕ್ಷಣ ಇಲಾಖೆ ಸಜ್ಜಾಗಿದೆ. ಒಂದರಿಂದ ಒಂಬತ್ತನೇ ತರಗತಿವರೆಗೆ ಖಾಸಗಿ ಕೋಚಿಂಗ್ ಕ್ಲಾಸ್‌ಗಳನ್ನು ನಡೆಸದಂತೆ ನಿರ್ಬಂಧ ವಿಧಿಸುವ ಪ್ರಸ್ತಾವನೆಯನ್ನು ಶಾಲಾ ಶಿಕ್ಷಣ ಇಲಾಖೆ ಮುಂದಿಟ್ಟಿದೆ. ಶಾಲೆಗಳ ಮತ್ತೊಂದು ಶಾಖೆಯಂತೆಯೇ ಕಾರ್ಯನಿರ್ವಹಿಸುತ್ತಿರುವ ಟ್ಯೂಷನ್ ಸೆಂಟರ್‌ಗಳಿಗೆ ಕಡಿವಾಣ ಹಾಕುವುದು ಈ ಪ್ರಸ್ತಾವನೆಯ ಉದ್ದೇಶವಾಗಿದೆ. ಅನಧಿಕೃತ ಶಾಲೆಗಳ ಮಾದರಿಯಲ್ಲಿ ಯಾವುದೇ ನಿಯಂತ್ರಣವಿಲ್ಲದೆ ನಡೆಯುತ್ತಿರುವ ಟ್ಯೂಷನ್ ಕೇಂದ್ರಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.

ಪ್ರಸ್ತಾವನೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘಟನೆ ಸ್ವಾಗತ

ಇನ್ನು ಶಿಕ್ಷಣ ಇಲಾಖೆಯ ಈ ಪ್ರಸ್ತಾವನೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘಟನೆ ಸ್ವಾಗತ ವ್ಯಕ್ತಪಡಿಸಿದೆ. ಒಂದರಿಂದ ಒಂಬತ್ತನೇ ತರಗತಿವರೆಗಿನ ಟ್ಯೂಷನ್ ನಿಷೇಧದ ನಿರ್ಧಾರವನ್ನು ಬೆಂಬಲಿಸಿರುವ ಸಂಘಟನೆ, ರಾಜ್ಯದಲ್ಲಿ ಎಲ್ಲಾ ರೀತಿಯ ಅನಧಿಕೃತ ಖಾಸಗಿ ಟ್ಯೂಷನ್‌ಗಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿದೆ. ಶಿಕ್ಷಣ ಕಾಯ್ದೆಯ ರೂಲ್ 4 ಮತ್ತು 6 ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಪಿಯುಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ನಡೆಸುವ ಸಂಸ್ಥೆಗಳು ಸರ್ಕಾರದಿಂದ ಅಧಿಕೃತ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಬೇಕು ಎಂದು ಆಗ್ರಹಿಸಿದೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಟ್ಯೂಷನ್ ವ್ಯವಸ್ಥೆಯಲ್ಲೂ ಸುಧಾರಣೆ ತರುವಂತೆ ಒತ್ತಾಯ ಮಾಡಿವೆ.

ಇದನ್ನೂ ಓದಿ: ಎಸ್​ಎಸ್​ಎಲ್​ಸಿ-ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ ಎರಡೇ ಮುಖ್ಯ ಪರೀಕ್ಷೆ!

ಜೊತೆಗೆ ನೀಟ್ ಮತ್ತು ಜೆಇಇ ಪ್ರವೇಶ ಪರೀಕ್ಷೆಗಳ ಸಿಲಬಸ್ ಅನ್ನೇ ಶಾಲಾ-ಕಾಲೇಜುಗಳಲ್ಲಿ ಬೋಧಿಸುವಂತೆ ಸಂಘಟನೆ ಆಗ್ರಹಿಸಿದೆ.  ಖಾಸಗಿ ಕೋಚಿಂಗ್‌ಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಲು ಸಾಧ್ಯವಾಗದ ಬಡ ವಿದ್ಯಾರ್ಥಿಗಳಿಗೂ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಲ್ಲಿ ಸಮಾನ ಅವಕಾಶ ಸಿಗಬೇಕು. ಸರ್ಕಾರಿ ಕಾಲೇಜುಗಳಲ್ಲಿ ಓದುವ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗಬಾರದು. ಟ್ಯೂಷನ್‌ಗೆ ಹೋಗುವ ಸಾಮರ್ಥ್ಯವಿರುವ ಶ್ರೀಮಂತ ವಿದ್ಯಾರ್ಥಿಗಳು ಮತ್ತು ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನೇ ಅವಲಂಬಿಸಿರುವ ಬಡ ವಿದ್ಯಾರ್ಥಿಗಳ ನಡುವಿನ ಶೈಕ್ಷಣಿಕ ಅಂತರವನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದೆ.

ಒಟ್ಟಿನಲ್ಲಿ ಒಂದರಿಂದ ಒಂಬತ್ತನೇ ತರಗತಿವರೆಗಿನ ಖಾಸಗಿ ಟ್ಯೂಷನ್‌ಗಳಿಗೆ ಕಡಿವಾಣ ಹಾಕುವ ಶಿಕ್ಷಣ ಇಲಾಖೆಯ ಪ್ರಸ್ತಾವನೆ ಈಗ ಚರ್ಚೆಗೆ ಗ್ರಾಸವಾಗಿದೆ. ಒಂದು ಕಡೆ ಅನಧಿಕೃತ ಕೋಚಿಂಗ್ ಸೆಂಟರ್‌ಗಳ ನಿಯಂತ್ರಣಕ್ಕೆ ಒತ್ತಾಯ ಕೇಳಿಬಂದಿದ್ದರೆ, ಮತ್ತೊಂದೆಡೆ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಮಾನ ಅವಕಾಶ ಕಲ್ಪಿಸುವ ಸವಾಲು ಸರ್ಕಾರದ ಮುಂದಿದೆ. ಈ ಪ್ರಸ್ತಾವನೆ ಜಾರಿಯಾದರೆ ರಾಜ್ಯದ ಖಾಸಗಿ ಟ್ಯೂಷನ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source: TV9 Kannada Education

Read full article on TV9 Kannada Education

Leave a Comment

Your email address will not be published. Required fields are marked *

समाचार की भाषा चुनें / Choose News Language