
ಬೆಂಗಳೂರು, ಅಕ್ಟೋಬರ್ 20: ರಾಜ್ಯದಾದ್ಯಂತ ಹವಾಮಾನದಲ್ಲಿ ಪ್ರಮುಖ ಬದಲಾವಣೆಗಳು ಕಂಡುಬರುತ್ತಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆಯ ವರದಿಯಂತೆ, ಕರಾವಳಿ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದರೆ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಸಾರ್ವಜನಿಕರು ಹಾಗೂ ರೈತರು ಸೂಕ್ತ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಪ್ರಾದೇಶಿಕ ಹವಾಮಾನ ವಿವರ
- ಕರಾವಳಿ ಕರ್ನಾಟಕ: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
- ಉತ್ತರ ಒಳನಾಡು: ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ.
- ದಕ್ಷಿಣ ಒಳನಾಡು: ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ ಹಾಗೂ ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಹಾಸನ, ಮಂಡ್ಯ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾದ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪ್ರಮುಖವಾಗಿ ಒಣ ಹವಾಮಾನ ಇರಲಿದೆ.
ನಾಳೆಯ ಹವಾಮಾನ ಹೇಗಿದೆ?
ನಾಳೆ (ಅ. 21) ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ, ಗುಡುಗು ಮತ್ತು ಬಿರುಗಾಳಿ (30-40 ಕಿ.ಮೀ ವೇಗ) ಬೀಸುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿತ್ರದುರ್ಗ ಹಾಗೂ ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವಾಮಾನ ಮುಂದುವರಿಯಲಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Source: TV9 Kannada National
